ಎಲ್ಪಿಜಿ ಸಿಲಿಂಡರ್, ಪೆಟ್ರೋಲ್ ಮತ್ತು ಡೀಸೆಲ್ ಕುರಿತಾಗಿ ಸಾರ್ವಜನಿಕರಲ್ಲಿ ಹರಡುತ್ತಿರುವ ತಪ್ಪು ಮಾಹಿತಿಗೆ ಯಾರೂ ಆತಂಕ ಪಡುವ ಅಗತ್ಯವಿಲ್ಲ. ಧಾರವಾಡ ಜಿಲ್ಲೆಯಲ್ಲಿ ಇಂಧನ ಕೊರತೆಯಿಲ್ಲ, ವದಂತಿ ನಂಬಿ ಆತಂಕ ಪಡಬೇಡಿ; ಸುಳ್ಳು ಸುದ್ದಿ ಹರಡಿದರೆ ಕಾನೂನು ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಸ್ನೇಹಲ್.ಆರ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಜಿಲ್ಲೆಯ ಎಲ್ಲಾ ಪೆಟ್ರೋಲ್ ಬಂಕ್‌ಗಳಲ್ಲಿ ಈಗಾಗಲೇ ಸಾಕಷ್ಟು ಇಂಧನ ದಾಸ್ತಾನು ಲಭ್ಯವಿದ್ದು, ನಾಲ್ಕು ರಿಂದ ಐದು ದಿನಗಳಿಗೆ ಬೇಕಾಗುವಷ್ಟು ಸಂಗ್ರಹ ಇದೆ ಎಂದು ಅವರು ಹೇಳಿದರು. ಸಾಮಾನ್ಯವಾಗಿ ಜಿಲ್ಲೆಯಲ್ಲಿ ಪ್ರತಿದಿನ 60 ರಿಂದ 65 ಕಿಲೋಲೀಟರ್ (ಕೆ.ಎಲ್) ಇಂಧನ ಸರಬರಾಜಾಗುತ್ತಿದ್ದು, ಕಳೆದ ಎರಡು, ಮೂರು ದಿನಗಳಲ್ಲಿ ಸುಳ್ಳು ಸುದ್ದಿ ಹರಡಿದ ಪರಿಣಾಮವಾಗಿ 100 ರಿಂದ 110 ಕೆ.ಎಲ್ ವರೆಗೆ ಸರಬರಾಜು ಮಾಡಲಾಗುತ್ತಿದೆ ಮತ್ತು ಆತಂಕದಿಂದ ಪೆಟ್ರೋಲ್ ಮತ್ತು ಡೀಸೆಲ್ ಬಂಕ್‌ಗಳಲ್ಲಿ ಅನಾವಶ್ಯಕವಾಗಿ ಸರತಿ ಸಾಲಿನಲ್ಲಿ ನಿಲ್ಲುವ ಅಗತ್ಯವಿಲ್ಲ ಎಂದು ಅವರು ತಿಳಿಸಿದರು.ಒಂದು ವೇಳೆ ದಾಸ್ತಾನು ಕಡಿಮೆಯಾದರೂ, ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್, ಭಾರತ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್ ಹಾಗೂ ಹಿಂದುಸ್ತಾನ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್ ಸಂಸ್ಥೆಗಳು ಅಗತ್ಯ ಸರಬರಾಜು ಮಾಡಲಿವೆ ಎಂದು ಅವರು ಹೇಳಿದರು.ಜಿಲ್ಲೆಯಲ್ಲಿ ಪ್ರಸ್ತುತ 10,026 ಗೃಹ ಬಳಕೆಯ ಎಲ್ಪಿಜಿ ಸಿಲಿಂಡರ್‌ಗಳು ಹಾಗೂ 800 ವಾಣಿಜ್ಯ ಸಿಲಿಂಡರ್‌ಗಳು ದಾಸ್ತಾನುಗಳಲ್ಲಿ ಲಭ್ಯವಿವೆ ಎಂದು ಅವರು ತಿಳಿಸಿದ್ದಾರೆ.ಸುಳ್ಳು ಮಾಹಿತಿ ಹರಡಿ ಸಾರ್ವಜನಿಕರಲ್ಲಿ ಆತಂಕ ಉಂಟು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.
ಧಾರವಾಡ ಜಿಲ್ಲೆಯಲ್ಲಿ ಇಂಧನ ಕೊರತೆಯಿಲ್ಲ, ವದಂತಿ ನಂಬಿ ಆತಂಕ ಪಡಬೇಡಿ; ಸುಳ್ಳು ಸುದ್ದಿ ಹರಡಿದರೆ ಕಾನೂನು ಕ್ರಮ: ಎಚ್ಚರಿಕೆ ನೀಡಿದ ಜಿಲ್ಲಾಧಿಕಾರಿ ಸ್ನೇಹಲ್.ಆರ್
















Leave a Reply